ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ವಿಚಾರವಾಗಿ ಬುಧವಾರ ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ. ವೆಂಕಟೇಶ್, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ನ್ನು ರದ್ದುಪಡಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ. ಹಾಗಾಗಿ ಮುಂದೆ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಉತ್ತರಿಸಿದರು.
ವೆಂಕಟೇಶ್ ಅವರ ಹೇಳಿಕೆಗೆ ಪೂರಕವಾಗಿ ಸಚಿವ ಕೃಷ್ಣಬೈರೇಗೌಡ, ಆರ್. ಬಿ. ತಿಮ್ಮಾಪುರ ಮತ್ತಿತರ ಆಡಳಿತ ಪಕ್ಷದ ಸದಸ್ಯರು, ಕೇಳಿದ ಪ್ರಶ್ನೆಗೆ ಉತ್ತರ ನೀಡಲಾಗಿದೆ. ಆದರೂ ಬಿಜೆಪಿ ಸದಸ್ಯರು ಕಾಲಹರಣ ಮಾಡಲು ಅನಗತ್ಯವಾಗಿ ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.