ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು ‘ಗೃಹಜ್ಯೋತಿ’ ಯೋಜನೆ. ಜನರು ಈಗಾಗಲೇ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ.
ಇಂಧನ ಸಚಿವ ಕೆ. ಜೆ. ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಗೃಹಜ್ಯೋತಿ’ ಯೋಜನೆ ಕುರಿತಂತೆ ನಡೆದ ಚರ್ಚೆಯ ವೇಳೆ ಸಚಿವರು ಈ ಬಗ್ಗೆ ಮಾತನಾಡಿದರು.
ಸಚಿವರು ಮಾತನಾಡಿ, “ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ, ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ” ಎಂದು ಹೇಳಿದರು.