ಮಂಗಳೂರು: ಮಾದಕ ವಸ್ತು ಎಂಡಿಎಂಎಯನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬೋಳಿಯಾರು ಗ್ರಾಮದ ಆರೀಫ್ (28) ಬಂಧಿತ ಆರೋಪಿ. ಆರೀಫ್ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಪರಿಸರದಲ್ಲಿ ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಯಿಂದ 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಅಲ್ಟೋ 800 ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 6,35,500 ರೂ.ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶ್ಯಾಮ್ ಸುಂದರ್ ಹೆಚ್‌ಎಂ, ಎಸ್ಸೈಗಳಾದ ರಾಜೇಂದ್ರ ಬಿ., ಸುದೀಪ್ ಎಂವಿ, ಶರಣಪ್ಪಭಂಡಾರಿ, ನರೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.