ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು,ಅವರನ್ನು ಜಿಲ್ಲಾಡಳಿತ ಬರಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಇನ್ನು ಉಡುಪಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 12.30ರಿಂದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಇದರ ಜೊತೆ ಉಡುಪಿ ಕಾಲೇಜು ವಿಡಿಯೋ ಪ್ರಕರಣದ ವಿವಾದದ ಕುರಿತು ಹಾಗೂ ಮಂಗಳೂರಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದ ಹಿನ್ನೆಲೆ ಖುದ್ದು ಸಿಎಂ ಅವರು ತೆರಳಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ಹೊರಟು ಸಂಜೆ 5.15ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ರಾತ್ರಿ 9ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.