ಬೆಂಗಳೂರು: ಕಾವೇರಿ ಜಲಾನಯನದ ನಮ್ಮ ಜಲಾಶಯಗಳಲ್ಲೇ ಸಾಕಷ್ಟು ನೀರಿಲ್ಲದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಹಾಗಾಗಿ ಕಾನೂನು ಪರಿಣತರ ಸಲಹೆಯಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ ಮುಂದೆ ನಿತ್ಯ 3000 ಕ್ಯುಸೆಕ್ ನೀರು ಹರಿಸಬೇಕೆಂಬ ಆದೇಶ ಪುನರ್ ಪರಿಶೀಲಿಸುವಂತೆ ಶನಿವಾರವೇ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿಲ್ಲದೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಕಾನೂನಾತ್ಮಕವಾಗಿ ಸಮರ್ಥವಾಗಿ ನಿಭಾಯಿಸುವುದು ಹೇಗೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಹಾಲಿ ಅಡ್ವೊಕೇಟ್ ಜನರಲ್‌ಗಳು, ಸುಪ್ರಿಂಕೋರ್ಟ್‌ನ ಕೆಲ ಹಿರಿಯ ವಕೀಲರೊಂದಿಗೆ ಸಭೆ ನಡೆಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ 3000 ಕ್ಯುಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ಸರ್ಕಾರದ ಪರ ನ್ಯಾಯವಾದಿಗಳು ಹಾಗೂ ಅಧಿಕಾರಿಗಳು ವಾದ ಮಂಡಿಸಿದ್ದಾರೆ.
ಆದರೆ, ಸಮಿತಿಯವರು ನೀವು ಹಿಂದಿನ ಆದೇಶವನ್ನು ಪೂರ್ಣವಾಗಿ ಪಾಲಿಸಿಲ್ಲ, ಹಾಗಾಗಿ ನೀರಿನ ಬಾಕಿ ಸರಿದೂಗಿಸಬೇಕು ಎಂದು 3000 ಕ್ಯುಸೆಕ್ ನೀರು ನೀಡಲು ಸೂಚಿಸಿದ್ದಾರೆ. ಇದನ್ನು ಪ್ರಶ್ನಿಸಿ ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆ ನಿವೃತ್ತ ನ್ಯಾಯಮೂರ್ತಿಗಳು, ಹಲವು ಕಾನೂನು ಪರಿಣಿತರು ಅವರ ಅನುಭದ ಆಧಾರದ ಮೇಲಹೆ ನೀಡಿದ್ದಾರೆ. ಅದರಂತೆ ಶನಿವಾರವೇ ಅರ್ಜಿ ಸಲ್ಲಿಸಲು ಕ್ರಮ ವಹಿಸಲಾಗುವುದು ಎಂದರು.
ಅಲ್ಲದೆ, ಪ್ರಮುಖವಾಗಿ ಕಾವೇರಿ, ಕೃಷ್ಣಾ ಮೇಲ್ದಂಡೆ, ಮಹದಾಯಿ ಸೇರಿದಂತೆ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಕಾನೂನು ತಂಡಕ್ಕೆ ಸಲಹೆ ನೀಡಲು ಪರಿಣಿತರನ್ನೊಳಗೊಂಡ ಸಲಹಾ ಸಮಿತಿ ರಚಿಸಲು ಹೇಳಿದ್ದಾರೆ. ಈ ಸಮಿತಿ ನಿತ್ಯ ಡಾಟಾ ಸಂಗ್ರಹಿಸಿ ಸರ್ಕಾರಕ್ಕೆ ನಿರಂತರ ಮಾಹಿತಿ, ಸಲಹೆ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ. ಅದರಂತೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.