ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಮಳೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ಗಂಟೆ ಕರಾವಳಿಯಲ್ಲಿ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.