ಬೆಂಗಳೂರು: ರಾಜ್ಯದ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇತ್ತೀಚೆಗೆ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ಬೇರೆ ರೀತಿಯಲ್ಲಿ ಬರೆದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ ಮತ್ತೊಂದು ವಿವಾದಿತ ಆದೇಶ ನೀಡಿದೆ.



ಖಾಸಗಿ ಶಾಲೆಗಳಿಗೆ ನಾಡಗೀತೆಯಾದ ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂಬರ್ಥದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.


ಈ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರದ ಈ ನಡೆ ಕೂಡ ಭಾರೀ ವಿರೋಧಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ಕಾಂಗ್ರೆಸ್ ಸರ್ಕಾರದಿಮದ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಈಗಾಗಲೇ ಕಿಡಿ ಕಾರುತ್ತಿರುವ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
“ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸಧ 2003, ದಿನಾಂಕ:07-01-2004ರ ಹಾಗೂ ತಿದ್ದುಪಡಿ ದಿನಾಂಕ:01-02-2024ರ ಅನ್ವಯ “(ಇ) ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ “(ಇ) ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.