ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ಪಡೆಯುವ ಖಾಸಗಿ ಲ್ಯಾಬ್ ಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಡೆಂಗ್ಯೂ ಪರೀಕ್ಷೆಗಾಗಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ಖಾಸಗಿ ಲ್ಯಾಬ್’ಗಳು ಪಡೆಯುತ್ತಿರುವ ವಿಚಾರ ನಮ್ಮ ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ಭಾಗದಲ್ಲಿರುವ ಖಾಸಗಿ ಸಂಸ್ಥೆ, ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ದರ ಪಡೆಯುತ್ತಿದ್ದ 22 ಲ್ಯಾಬ್’ಗಳಿಗೆ ನೋಟಿಸ್ ನೀಡಲಾಗಿದೆ ಎಂದರು.
ಸರ್ಕಾರದ ದರ ನಿಗದಿ ಆದೇಶವನ್ನು ಎಲ್ಲಾ ಖಾಸಗಿ ಲ್ಯಾಬ್, ಆಸ್ಪತ್ರೆಗಳು ಕಡ್ಡಾಯವಾಗಿ ಪಾಲಿಸಬೇಕು. ಡೆಂಗಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡುವುದು ಕಂಡುಬಂದಲ್ಲಿ ಅಂತಹ ಖಾಸಗಿ ಲ್ಯಾಬ್, ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.