ಪುತ್ತೂರು: ಒಂದು ಕಡೆ ರಾಜ್ಯದಲ್ಲಿ ರಣಭೀಕರ ಮಳೆಗೆ ಜನ ತತ್ತರಿಸಿದ್ದು, ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್ ನಲ್ಲಿ 5 ಬಾರಿ ಭೂ ಕುಸಿತ ಉಂಟಾಗಿತ್ತು. ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.
ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಹೌದು ಭಾರಿ ಮಳೆಯಿಂದಾಗಿ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಒಂದು ಗುಡ್ಡ ಕುಸಿತವು, ನಸುಕಿನ ಜಾವದಲ್ಲಿ ನಡೆದಿದ್ದರಿಂದ ಈ ವೇಳೆ ವಾಹನ ಸಂಚಾರ ಅಷ್ಟಾಗಿರಲಿಲ್ಲ ಹಾಗಾಗಿ ಬಾರಿ ಅನಾಹುತ ಒಂದು ತಪ್ಪಿದೆ ಎಂದು ಹೇಳಲಾಗುತ್ತಿದೆ.ಸದ್ಯ ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.ಅಲ್ಲದೆ ನೆರೆ, ಮಳೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.