ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆ ಹಿನ್ನೆಲೆಯಲ್ಲಿ ತೆರವಾಗಿರುವ ಎಂಎಲ್‌ಸಿ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಮಾಜಿ ಎಂಪಿ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ 15ಮಂದಿ ಆಕಾಂಕ್ಷಿಗಳಿದ್ದಾರೆ. ವಿಧಾನಪರಿಷತ್‌ಗೆ ನಡೆಯುತ್ತಿರುವ ಉಪಚುನಾವಣೆಯನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಬಿಜೆಪಿಯಿಂದ ಆಯ್ಕೆಯಾದ ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು ಹೆಚ್ಚಿರುವುದರಿಂದ ಬಿಜೆಪಿಗೆ ಗೆಲುವು ನಿಶ್ಚಿತವೆಂಬ ಆತ್ಮವಿಶ್ವಾಸವಿದೆ. ಆದರೆ ಕಾಂಗ್ರೆಸ್ ಸಂಖ್ಯಾಬಲ ಕಡಿಮೆಯಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ವಿಶ್ವಾಸದಲ್ಲಿದೆ. ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಬಯಸುವ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಮಾಜಿ ಎಂಪಿ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದಯಕುಮಾರ್ ಶೆಟ್ಟಿ, ಸತೀಶ್ ಕುಂಪಲ ಸೇರಿದಂತೆ 15 ಮಂದಿ ಆಕಾಂಕ್ಷಿಗಳಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿಕೊಡಲಾಗಿದೆ. ಇದರಲ್ಲಿ ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.