ಮಂಗಳೂರು: ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯಗತ ಮಾಡುವಂತೆ ಕೋರಿ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಸಲ್ಲಿಸಿದ್ದಾರೆ.



ದೆಹಲಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ಅವದು, ಈ ಹಿಂದೆ ನಿರ್ಮಲಾ ಸೀತಾರಾಮನ್ ರಕ್ಷಣಾ ಸಚಿವರಾಗಿದ್ದಾಗ ಮಂಗಳೂರಿಗೆ ಮಂಜೂರು ಮಾಡಿದ್ದ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಬಾಕಿಯಿರುವ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು.


ಆರ್ಥಿಕ ಸಂಕಷ್ಟ ಸೇರಿ ನಾನಾ ಸವಾಲು ಎದುರಿಸುತ್ತಿರುವ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಿ ಈ ಮಾರ್ಗದ ರೈಲು ಸೇವೆ ಹಾಗೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು. ಅಲ್ಲದೆ, ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಸೆಂಟರ್(ಜಿಸಿಸಿ) ಆಗಿ ಪರಿವರ್ತಿಸಿ ಜಾಗತಿಕ ಹೂಡಿಕೆ ಆಕರ್ಷಣೆಗೆ ಪೂರಕವಾಗುವ ಮೂಲಸೌಕರ್ಯ ಅಭಿವೃದ್ಧಿ, ಮಾನವ ಸಂಪನ್ಮೂಲ-ಕೌಶಲ್ಯಾಭಿವೃದ್ಧಿಗೆ ಬೇಕಾಗುವ ಅಗತ್ಯ ಕ್ರಮ ಕೈಗೊಳ್ಳಬೇಕು. ಜತೆಗೆ ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಕೋರಿದ್ದಾರೆ.