ಮಂಗಳೂರು : ದ.ಕ. ಜಿಲ್ಲಾಡಳಿತದ ಸಹಕಾರದೊಂದಿಗೆ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3ಕ್ಕೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ರ ಉಪಸ್ಥಿತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿ ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡುತ್ತಿದ್ದರೆ, ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಸೆಲ್ಫಿಗೆ ಮುಗಿ ಬೀಳುತ್ತಿದ್ದರು. ವಾರಾಂತ್ಯದ ಹಿನ್ನೆಲೆಯಲ್ಲಿ ಮೊದಲ ದಿನವೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತ ಸೇರಿದ್ದ ಜನರು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು.
ಸ್ಟ್ರೀಟ್ಫುಡ್ ಫಿಯೆಸ್ಟಗೆ ಆರಂಭದ ದಿನವೇ ಆಹಾರ ಪ್ರಿಯರಿಂದ ನಿರೀಕ್ಷೆಗೂ ಮೀರಿ ಜನ ಸ್ಪಂದನೆ ಸಿಕ್ಕಿದ್ದು, ಜ.22ರವರೆಗೆ ಪ್ರತಿನಿತ್ಯ ಸಂಜೆ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ತುಳುನಾಡ ಹಾಗೂ ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೇಯರ್ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ಯತೀಶ್ ಬೈಕಂಪಾಡಿ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಜಗದೀಶ್ ಕದ್ರಿ ಮತ್ತಿತರರು ಉಪಸ್ಥಿತರಿದ್ದರು. ನಿರೂಪಕ ಕಿರಣ್ ಶೆಣೈ ಕಾರ್ಯಕ್ರಮ ನಿರೂಪಿಸಿದರು.