GST ನೋಟಿಸ್‌ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡಲ್ಲ : CM ಸಿದ್ದರಾಮಯ್ಯ ಘೋಷಣೆ

Prakhara News
1 Min Read

ಬೆಂಗಳೂರು : ಜಿಎಸ್‌ಟಿ ನೋಟಿಸ್‌ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿ, ನೋಟಿಸ್‌ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ. ಆದರೆ ವರ್ತಕರು ನೋಂದಣಿ ಮಾಡಿಕೊಳ್ಳಬೇಕು. ಈಗ ಕೊಟ್ಟಿರುವ ನೋಟೀಸ್ ಮೇಲೆ ವಸೂಲಾತಿ, ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದರು.

ಮೂರು ವರ್ಷಗಳ ಬಾಕಿ ವಸೂಲಾತಿಗೆ ನೋಟಿಸ್ ಕೊಟ್ಟಿದ್ದರು .ಅದನ್ನ ಮುಂದುವರಿಸುವುದಿಲ್ಲ. ಕಡ್ಡಾಯ ಜಿಎಸ್‌ಟಿ ನೋಂದಣಿಗೆ ಒಪ್ಪಿದ್ದಾರೆ. ಜಿಎಸ್‌ಟಿ ಗೊಂದಲಕ್ಕೆ ಸಹಾಯವಾಣಿ ತೆರೆಯುತ್ತೇವೆ. ಜಿಎಸ್‌ಟಿ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ಮಾಡಲು ತೀರ್ಮಾನ ಮಾಡಿದ್ದೇವೆ. ವರ್ತಕರು ಯುಪಿಐ ಬಳಸಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್‌ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ. ಜಿಎಸ್‌ಟಿ ನೋಟಿಸ್‌ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ಯುಪಿಐ ಅಡಿ 40 ಲಕ್ಷ ರೂ. ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು ಎಂದರು.

Share This Article
Leave a Comment