ಪುತ್ತೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯ ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.


2022ರ ಏ.25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಆರೋಪಿ ಮಾಡ್ನೂರು ಗ್ರಾಮದ ನಿವಾಸಿ ಸತ್ತಾರ್ ಎಂಬಾತ ತನ್ನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ಕೆ ವಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ವೇಳೆ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಸಹಾಯಕ ಸರ್ಕಾರಿ ಅಭಿಯೋಜಕರಾದ ಕವಿತಾ ಕೆ ವಾದಿಸಿದ್ದರು.
