ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಸಕರು, ಗುಜರಾತ್‌ನ ಅಹಮದಾಬಾದ್‌ನಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದಂತೆಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.


ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಭೈರತಿ ಬಸವರಾಜ್ ಅವರಿಗೆ ಕಾನೂನಿನ ಅಡಿ ಯಾವುದೇ ರಕ್ಷಣೆ ಸಿಕ್ಕಿರಲಿಲ್ಲ. ಮೊದಲು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿಯನ್ನು ವಜಾಗೊಳಿಸಿದ್ದಲ್ಲದೆ, ತನಿಖಾ ಸಂಸ್ಥೆಯ ಮುಂದೆ ಶರಣಾಗುವಂತೆ ಖಡಕ್ ಸೂಚನೆ ನೀಡಿತ್ತು. ಇದೇ ಕಾರಣಕ್ಕೆ ಶಾಸಕರು ಶರಣಾಗಲು ಬೆಂಗಳೂರಿಗೆ ಆಗಮಿಸಿದ್ದರು ಎನ್ನಲಾಗಿದೆ.

ವಶಕ್ಕೆ ಪಡೆದ ಭೈರತಿ ಬಸವರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಸೀದಾ ಪರೀಕ್ಷೆ ಕೇಂದ್ರ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಾಥಮಿಕ ವಿಚಾರಣೆಯ ನಂತರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದರು ಸಾಧ್ಯತೆಯಿದೆ.

