ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ್ (34) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಜಾರಿಗೊಳಿಸಿದೆ.


ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮೇ 14ರಂದು ಈ ಆದೇಶ ಹೊರಡಿಸಿದ್ದು, ಆರೋಪಿಯನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಭರತ್ ಜಯರಾಮ್ ದಾಸ್ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯ ಹಂತದಲ್ಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



