ಕೊಡಗು : ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಸ್ನಾನ ಕಾರ್ಯಕ್ರಮದ ವೇಳೆ ನಡೆದ ದುರ್ಘಟನೆಯಲ್ಲಿ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.


ಕಾವೇರಿ ನದಿಯಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ಎರಡು ಆನೆಗಳ ನಡುವೆ ತಳ್ಳಾಟ ಉಂಟಾಗಿದ್ದು, ಈ ವೇಳೆ ಒಂದು ಆನೆ ನಿಯಂತ್ರಣ ತಪ್ಪಿ ಮಹಿಳೆಯ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಆನೆ ಕೆಳಗೆ ಸಿಲುಕಿದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಚೆನ್ನೈ ಪಲ್ಲಾವರಂ ಮೂಲದ 33 ವರ್ಷದ ಜಿನ್ಶು ಎಂದು ಗುರುತಿಸಲಾಗಿದೆ. ಪತಿ ಜೋಯಲ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಕಾರಣವಾದ ಪರಿಸ್ಥಿತಿಗಳ ಕುರಿತು ತನಿಖೆ ಮುಂದುವರಿದಿದೆ. ಪ್ರವಾಸಿಗರ ಸುರಕ್ಷತೆ ಕುರಿತು ಕೂಡ ಪರಿಶೀಲನೆ ನಡೆಯುತ್ತಿದೆ.


