Home ತಾಜಾ ಸುದ್ದಿ ರಾಜ್ಯದ ಎಲ್ಲಾ 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್

ರಾಜ್ಯದ ಎಲ್ಲಾ 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್

0

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ 5, 8, 9 ಹಾಗೂ 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿ ಬುಧವಾರ ಆದೇಶ ಹೊರಡಿಸಿದೆ.


2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ರವಿ ಹೊಸಮನಿ ಅವರಿದ್ದ ನ್ಯಾಯಪೀಠ 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.

ಇನ್ನು ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾಗಿದೆ ಎನ್ನಲಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆ ಅಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿತ್ತು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ಶಿಕ್ಷಣ ಸಚಿವರಾಗಿದ್ದ ಬಿ ಸಿ ನಾಗೇಶ್ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಪರೀಕ್ಷೆ ನಡೆಸುವ ಚಿಂತನೆ ನಡೆಸಲಾಗಿತ್ತು. ಇದೀಗ ಹೈಕೋರ್ಟ್‌ ಪರೀಕ್ಷೆ ಸುತ್ತೋಲೆಯನ್ನು ರದ್ದು ಮಾಡಿರುವುದರಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಈಗ‌ ರಾಜ್ಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಗೆ ಮಾತ್ರ ಪಬ್ಲಿಕ್ ಎಕ್ಸಾಮ್‌ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here