ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸುಮಲತಾ ಅಂಬರೀಷ್ ಘೋಷಣೆ ಮಾಡಿದ್ದಾರೆ.
ಇಂದು ಬೆಂಬಲಿಗರ ಜೊತೆ ಸಭೆ ನಡೆಸಿದ ಸುಮಲತಾ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸುಮಲತಾ ಅಂಬರೀಷ್ ಘೋಷಣೆ ಮಾಡಿದ್ದಾರೆ .
ಲೋಕಸಭೆಯಿಂದ ನಾನು ಸ್ಪರ್ಧಿಸುತ್ತಿಲ್ಲ, ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಘೋಷಣೆ ಮಾಡಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ತಪ್ಪಿದೆ. ಈ ಹಿನ್ನೆಲೆ ಅವರ ಮುಂದಿನ ನಡೆಯೇನು ಎಂಬ ಕುತೂಹಲ ಮೂಡಿತ್ತು.ಇದೀಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ.
ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ . ಆದ್ದರಿಂದ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ, ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ತಮ್ಮ ನಿರ್ಧಾರ ಪ್ರಕಟಿಸಿದರು.
ಸಭೆಯಲ್ಲಿ ಮಾತನಾಡಿದ ಸುಮಲತಾ ‘ 5 ವರ್ಷಗಳ ಹಿಂದೆ ಐತಿಹಾಸಿಕ ಗೆಲುವನ್ನು ನೀವು ಕೊಟ್ಟಿದ್ರಿ, ಇಂಡಿಯಾ ಅಂದರೆ ಮಂಡ್ಯ, ಮಂಡ್ಯ ಅಂದರೆ ಇಂಡಿಯಾ ಎನ್ನುವ ರೀತಿಯಲ್ಲಿ ಬಿಂಬಿಸಿದ್ರಿ, ನನ್ನ ಯೋಜನೆಗಳನ್ನು ಅನುಷ್ಟಾನಕ್ಕೆ ತರುವಲ್ಲಿ ನೀವು ಸಹಾಯ ಮಾಡಿದ್ರಿ..ನಿಮಗೆ ಚಿರರುಣಿ’ ಎಂದರು. ಅಕ್ರಮ ಗಣಿಕಾರಿಕೆ ವಿರುದ್ಧ ದೊಡ್ಡ ಯುದ್ದವನ್ನೇ ಮಾಡಿದ್ದೇನೆ. ಮಂಡ್ಯ ಜಿಲ್ಲಾಡಳಿತ ನನಗೆ ಸಂಪೂರ್ಣ ಸಹಕಾರ ನೀಡಿದೆ. ಮಂಡ್ಯದ ಜನ ನನಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಎಲ್ಲರಿಗೂ ಚಿರರುಣಿ ಎಂದು ಸುಮಲತಾ ಹೇಳಿದರು.ಸಭೆಯಲ್ಲಿ ನಟರಾದ ದರ್ಶನ್, ಅಭಿಷೇಕ್ ಅಂಬರೀಶ್, ರಾಕ್ ಲೈನ್ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.