ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 3ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿದ್ದಾರೆ. ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.


ಪಾಲಕರು ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಕಳುಹಿಸದಂತೆ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಮನವಿ ಮಾಡಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ನಿರ್ದೇಶಿಸಲಾಗಿದೆ.

ಪ್ರತಿ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು 1077 ( ) ಟೋಲ್ ಫ್ರೀ ಸಂಖ್ಯೆ , 0824-2442590 ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.




