ಮಂಗಳೂರು : “ಡ್ರಗ್ಸ್ ಫ್ರಿ ಮಂಗಳೂರು” ಅಭಿಯಾನದಡಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧಿಸಿ, ಅವರಿಂದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.


ವಶಪಡಿಸಿಕೊಂಡ ಮಾದಕ ವಸ್ತುವಿನ ಅಂದಾಜು ಮೌಲ್ಯ ₹5.20 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಾರ್ಯಾಚರಣೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಿಂದಿನ ಎಂಡಿಎಂಎ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿದೆ.

ಜೂನ್ 25ರಂದು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು, 15.17 ಗ್ರಾಂ ಎಂಡಿಎಂಎ ಸಹಿತ ಅಣ್ಣಪ್ಪ ಸ್ವಾಮಿ @ ಮನು ಎಂಬಾತನನ್ನು ಬಂಧಿಸಿದ್ದರು. ತನಿಖೆ ವೇಳೆ ಆತನಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಜಾಲದ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿದ ಸಿಸಿಬಿ ತಂಡ, ಬೆಳ್ತಂಗಡಿ ಮೂಲದ ಮೊಹಮ್ಮದ್ ಅಲ್ಪಾಜ್ (28) ಹಾಗೂ ಮೊಹಮ್ಮದ್ ಮುಸ್ತಾಫಾ (28) ಅವರನ್ನು ಬಂಧಿಸಿದೆ.

ಬಂಧಿತರಿಂದ 5.196 ಕೆಜಿ ಎಂಡಿಎಂಎ, ಒಂದು ಬ್ಯಾಗ್ ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ.


