ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಢಿಕ್ಕಿಯಾಗಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದಾರುಣ ಸಾವು..!

Prakhara News
1 Min Read

ಉಡುಪಿ : ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ಬಿಜೆಪಿ ನಾಯಕಿ ಲಕ್ಷ್ಮೀ ಮಂಜುನಾಥ್ ಕೊಳ (37) ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿದ್ದ ಲಕ್ಷ್ಮೀ ಮಂಜುನಾಥ್, ಬಳಿಕ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ಕೋರ್ಟ್ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತಿವೇಗವಾಗಿ ಬಂದ ಖಾಸಗಿ ಬಸ್ಸೊಂದು ಅವರಿಗೆ ತೀವ್ರವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು.

ಬಿಜೆಪಿ ಮುಖಂಡ ಮಂಜುನಾಥ್ ಕೊಳ ಅವರ ಧರ್ಮಪತ್ನಿಯಾಗಿರುವ ಲಕ್ಷ್ಮೀ ಮಂಜುನಾಥ್ ಕೊಳ ಅವರು ತಮ್ಮ ಸರಳತೆ, ಸೌಜನ್ಯ ಹಾಗೂ ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾಗಿದ್ದರು. ನಗರಸಭೆಯ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿ ಪ್ರಾಮಾಣಿಕತೆ ಹಾಗೂ ಜನಪರ ಕಾಳಜಿಯ ಮೂಲಕ ಸಾರ್ವಜನಿಕರ ಅಪಾರ ಪ್ರೀತಿ-ವಿಶ್ವಾಸ ಗಳಿಸಿದ್ದರು. ಸಾಮಾಜಿಕ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದ ಅವರ ಅಕಾಲಿಕ ಮರಣಕ್ಕೆ ಉಡುಪಿಯ ಗಣ್ಯರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment