ಮಂಗಳೂರು : ವಿಮಾನ ನಿಲ್ದಾಣ ಪಾರ್ಕಿಂಗ್ ಶುಲ್ಕ ಏರಿಕೆ ವಿರೋಧಿಸಿ ಟ್ಯಾಕ್ಸಿ ಚಾಲಕರ ಪ್ರತಿಭಟನೆ.

Prakhara News
1 Min Read

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಂಪ್ರದಾಯಿಕ ಟ್ಯಾಕ್ಸಿಗಳಿಗೆ ವಿಧಿಸಿರುವ ಪಾರ್ಕಿಂಗ್ ಶುಲ್ಕ ಏರಿಕೆಯನ್ನು ವಿರೋಧಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್‌ಗಳ ನೇತೃತ್ವದಲ್ಲಿ ಮಂಗಳವಾರ ಕಾವೂರು ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಆನಂದ್ ಕೆ., ಸರ್ಕಾರದ ಎಲ್ಲಾ ತೆರಿಗೆಗಳನ್ನು ಪಾವತಿಸಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕ ಪಾರ್ಕಿಂಗ್ ದರ ವಿಧಿಸಿರುವುದು ಅನ್ಯಾಯವಾಗಿದೆ. ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಉಡುಪಿ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕೋಟ್ಯಾನ್ ಮಾತನಾಡಿ, ದೇಶದ ಇತರ ವಿಮಾನ ನಿಲ್ದಾಣಗಳಲ್ಲಿ ಇಂತಹ ತಾರತಮ್ಯ ಇಲ್ಲ. ಸಾವಿರಾರು ಕುಟುಂಬಗಳ ಜೀವನಾಧಾರವಾಗಿರುವ ಪ್ರವಾಸಿ ವಾಹನ ಕ್ಷೇತ್ರವನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಹೇಳಿದರು.

ಸಂಘದ ಹಿರಿಯ ಸದಸ್ಯ ಪ್ರಮೋದ್ ಕುಮಾರ್ ಉಳ್ಳಾಲ್, ವಿಮಾನ ನಿಲ್ದಾಣದ ನಿರ್ವಹಣೆಯಲ್ಲಿ ಟ್ಯಾಕ್ಸಿ ಚಾಲಕರ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ ನವೀನ್ ಕುಮಾರ್ ಮನವಿ ಸ್ವೀಕರಿಸಿ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವಿಮಾನ ನಿಲ್ದಾಣದ ಸ್ಥಳೀಯ ಅಧಿಕಾರಿಗಳು ಸಹ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Share This Article
Leave a Comment