ತುಮಕೂರು: ಮಂಗಳೂರು ರೈಲ್ವೆ ವಿಭಾಗವನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೇರಳದಲ್ಲಿ ಯಾರೇ ವಿರೋಧ ವ್ಯಕ್ತಪಡಿಸಿದರೂ ತಮ್ಮ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಜಾಲವನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ವಿಚಾರವಾಗಿ ಕೇರಳದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದರು.


“ಯುಡಿಎಫ್, ಸಿಪಿಐ, ಸಿಪಿಎಂ ಸೇರಿದಂತೆ ಕೇರಳದ ಎಲ್ಲ ವಿರೋಧ ಪಕ್ಷದವರು ನನ್ನ ವಿರುದ್ಧ ಮಾತನಾಡುತ್ತಿದ್ದಾರೆ, ನಾನು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ ಇಲಾಖೆಯಲ್ಲಿದ್ದ ಅಡಚಣೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇನೆಯೇ ಹೊರತು ಕೇರಳಕ್ಕೆ ಯಾವುದೇ ಅಪಚಾರ ಮಾಡಿಲ್ಲ. ಮಾತನಾಡುವವರು ಮಾತನಾಡಲಿ, ನಾನು ಕೆಲಸ ಮಾಡುವವ ಎಂಬುದು ಎಲ್ಲರಿಗೂ ಗೊತ್ತಿದೆ,” ಎಂದು ತಿರುಗೇಟು ನೀಡಿದರು.
ಕೇರಳದಲ್ಲಿ 20 ಮೀನುಗಾರಿಕಾ ಬಂದರುಗಳಿವೆ, ಅವರ ಬಜೆಟ್‌ನಲ್ಲಿ ಅದಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅವರ ರಾಜ್ಯದ ಬಗ್ಗೆ ಅವರು ನಿರ್ಧಾರ ತೆಗೆದುಕೊಳ್ಳಲಿ. ಆದರೆ ಕರ್ನಾಟಕದಲ್ಲಿರುವುದು ಒಂದೇ ಮಂಗಳೂರು ಬಂದರು. ಅದಕ್ಕೆ ಸರಕು ಆಮದು ಮತ್ತು ರಫ್ತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದಾಗಿ ಸ್ಥಳೀಯರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶಗಳು ದೊರೆಯಲಿವೆ,” ಎಂದರು.

ಮಂಗಳೂರು ರೈಲ್ವೆ ವಿಭಾಗವನ್ನು ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬುದು ಕಳೆದ 25 ವರ್ಷಗಳ ಸುದೀರ್ಘ ಹೋರಾಟವಾಗಿತ್ತು. ಹಿಂದೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹ ಪ್ರಯತ್ನಿಸಿದ್ದರು. ಇತ್ತೀಚೆಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನನ್ನನ್ನು ಭೇಟಿಯಾಗಿ ಮನವಿ ಮಾಡಿದ್ದರು. ಮೂವರು ಜನರಲ್ ಮ್ಯಾನೇಜರ್‌ಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಾಧಕ-ಬಾಧಕ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ಸ್ವಜನಪಕ್ಷಪಾತವಿಲ್ಲ,” ಎಂದು ಸಚಿವರು ಸ್ಪಷ್ಟಪಡಿಸಿದರು.

