ಮಂಡ್ಯ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಒಂದೇ ಕುಟುಂಬದ ಮೂವರ ದಾರುಣ ಸಾವು..!

Prakhara News
1 Min Read

ಮಂಡ್ಯ : ಗೌರಿ-ಗಣೇಶ ಹಬ್ಬದ ಸಂಭ್ರಮ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಾಲಿನ ಕ್ಯಾಂಟರ್ ಡಿಕ್ಕಿಯಾಗಿ ಪತಿ, ಪತ್ನಿ ಹಾಗೂ ಮಗಳು ಮೃತಪಟ್ಟಿರುವ ದಾರುಣ ಘಟನೆ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಮುತ್ತುರಾಜ್ (35), ಕಾವ್ಯ (30) ಹಾಗೂ ಕೀರ್ತನ (8) ಎಂದು ಗುರುತಿಸಲಾಗಿದೆ. ಮತ್ತೊಂದು ಮಗಳಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತುರಾಜ್ ಅವರು ಕನಕಪುರದ ಕೂತನಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಪೀಣ್ಯದಲ್ಲಿರುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪತ್ನಿಯ ತವರು ಮನೆಗೆ ಕುಟುಂಬ ಸಮೇತರಾಗಿ ಬಂದಿದ್ದರು. ಹಬ್ಬ ಮುಗಿದ ಬಳಿಕ ಕೆಲಸಕ್ಕೆ ತೆರಳಬೇಕಿದ್ದ ಕಾರಣ ಇಂದು ಬೆಳಗ್ಗೆ ಬೆಂಗಳೂರಿಗೆ ಸ್ಕೂಟರ್‌ನಲ್ಲಿ ಹೊರಟಿದ್ದರು. ಕೊಪ್ಪದಲ್ಲಿ ಹಿಂಬದಿಯಿಂದ ಬಂದ ಹಾಲಿನ ಕ್ಯಾಂಟರ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಘಟನಾ ಸ್ಥಳ ಹಾಗೂ ಮಿಮ್ಸ್ ಶವಾಗಾರಕ್ಕೆ ಮಂಡ್ಯ ಎಸ್ಪಿ ಶೋಭರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಲಿನ ಕ್ಯಾಂಟರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನ ವಿಚಾರಣೆ ನಡೆಸಲಾಗುತ್ತಿದೆ. ಅಪಘಾತದ ನಿಖರ ಕಾರಣ ತಿಳಿಯಲು ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಎಸ್ಪಿ ಶೋಭರಾಣಿ ತಿಳಿಸಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment