ಮಂಗಳೂರು: ಅಮಾನತುಗೊಳಿಸಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಸಂತ್ರಸ್ತರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.


ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಜಪ್ತಿ ಮಾಡಿ ಅಮಾನತಿನಲ್ಲಿಡಲಾಗಿದ್ದ ಹಣವನ್ನು ವಾಪಸ್ ಬಿಡುಗಡೆ ಮಾಡಲು ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಅವರು ₹25,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಆರೋಪಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಈಗಾಗಲೇ ಫಿರ್ಯಾದುದಾರರಿಂದ ಮುಂಗಡವಾಗಿ ₹15,000 ಹಣವನ್ನು ಪಡೆದುಕೊಂಡಿದ್ದರು. ಆ ನಂತರವೂ ಬಾಕಿ ಹಣದ ಜೊತೆಗೆ ಹೆಚ್ಚುವರಿಯಾಗಿ ₹5,000 ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಇನ್ಸ್‌ಪೆಕ್ಟರ್ ಲಂಚದ ಕಾಟದಿಂದ ಬೇಸತ್ತ ಸಂತ್ರಸ್ತರು ಈ ಕುರಿತು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಂತ್ರಸ್ತರು ನೀಡಿದ ದೂರಿನನ್ವಯ ಲೋಕಾಯುಕ್ತ ಪೊಲೀಸರು ಯೋಜನಾಬದ್ಧವಾಗಿ ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ 21 ರಂದು ದೂರುದಾರರಿಂದ ₹5,000 ಲಂಚದ ಹಣವನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ಸಡನ್ ದಾಳಿ ನಡೆಸಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ಹಿಡಿದುಕೊಂಡಿದೆ.

ಆರೋಪಿ ಪೊಲೀಸ್ ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ವಿಚಾರಣೆ ಹಾಗೂ ತನಿಖೆ ಮುಂದುವರಿಸಿದ್ದಾರೆ.

