ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಬಂಧಿಸಿರುವ ಪೊಲೀಸರು, ಆತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಕೆ.ಸಿ. ರೋಡ್, ಅಜ್ಜಿನಡ್ಕ ಗ್ರಾಮದ ರುಕ್ಷಾನ ಮಂಜೀಲ್ ನಿವಾಸಿ ಮೊಹಮ್ಮದ್ ಇರ್ಫಾನ್ ಎ.ಕೆ (26) ಎಂದು ಗುರುತಿಸಲಾಗಿದೆ.


ಸೆಪ್ಟೆಂಬರ್ 29, 2026 ರಂದು ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ, ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ಡಾಮಾರು ರಸ್ತೆಯ ಬಳಿ ಆರೋಪಿ ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ತಕ್ಷಣವೇ ಆತನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ, ಆತನ ಬಳಿ ಇದ್ದ ಸುಮಾರು 16 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ.
ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಅಂದಾಜು ಮೌಲ್ಯ ₹1,60,000 (ಒಂದು ಲಕ್ಷದ ಅರವತ್ತು ಸಾವಿರ ರೂಪಾಯಿ) ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಕ್ರೈಂ ನಂಬರ್ 128/2026 ರಂತೆ ಎನ್‌ಡಿಪಿಎಸ್ (NDPS) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಬಂಧಿತ ಆರೋಪಿ ಮೊಹಮ್ಮದ್ ಇರ್ಫಾನ್ ಎ.ಕೆ ವಿರುದ್ಧ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಅಪರಾಧಿಕ ಪ್ರಕರಣಗಳು ದಾಖಲಾಗಿವೆ


