ಕೊಲ್ಲೂರು: ಕಾರಿನಲ್ಲಿ ದನ ಕದ್ದು ಪರಾರಿಯಾಗಿದ್ದ ಗ್ಯಾಂಗ್‌ನ ಪ್ರಮುಖ ಆರೋಪಿ ಬಂಧನ..!

Prakhara News
1 Min Read

ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಅತ್ಯಂತ ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಬಂಧಿತ ಪ್ರಮುಖ ಆರೋಪಿ. ಕಳೆದ ಸೆಪ್ಟೆಂಬರ್ 29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತ ಕಳ್ಳರ ಗುಂಪೊಂದು ಕಾರಿನಲ್ಲಿ ಆಗಮಿಸಿ, ರಸ್ತೆ ಬದಿಯಲ್ಲಿದ್ದ ದನವನ್ನು ಬಲವಂತವಾಗಿ ಎಳೆದುಕೊಂಡು ಕಾರಿನೊಳಗೆ ತುಂಬಿಕೊಂಡು ಪರಾರಿಯಾಗಿತ್ತು. ಈ ಸಂಪೂರ್ಣ ಕೃತ್ಯವು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಾವಳಿಗಳು ತೀವ್ರವಾಗಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದವು. ಈ ಬಗ್ಗೆ ಸ್ಥಳೀಯರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರನ್ನು ಪತ್ತೆಹಚ್ಚಿ, ಪ್ರಮುಖ ಆರೋಪಿ ಮೊಹಮ್ಮದ್ ಸಿನಾನ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ಪ್ರತ್ಯೇಕ ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೃತ್ಯದಲ್ಲಿ ಇನ್ನು ಇಬ್ಬರು ಆರೋಪಿಗಳು ಭಾಗಿಯಾಗಿರುವುದು ತಿಳಿದುಬಂದಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮಾರ್ಗದರ್ಶನದಲ್ಲಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ, ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರಿದ್ದ ತಂಡ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟಿದೆ.

Share This Article
Leave a Comment