ಪುತ್ತೂರು: ಅಕ್ರಮವಾಗಿ ಗೋವುಗಳ ಸಾಗಾಟ ಪತ್ತೆ; 11 ಜಾನುವಾರುಗಳ ರಕ್ಷಣೆ, ಓರ್ವನ ಬಂಧನ..!

Prakhara News
1 Min Read

ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಕೇರಳದ ಕಡೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಭೇದಿಸಿದ್ದು, 11 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಬಂಧಿತ ಆರೋಪಿ.

ಅಕ್ಟೋಬರ್ 5 ರಂದು ಬೆಳಗಿನ ಜಾವ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುಷ್ಮಾ ಜಿ. ಭಂಡಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ ಪಿಕಪ್ ವಾಹನವನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ವಾಹನದ ಚಾಲಕ ಹಾಗೂ ವಾಹನದಲ್ಲಿದ್ದ ಮತ್ತೋರ್ವ ವ್ಯಕ್ತಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ.

ಪೋಲಿಸರು ವಾಹನವನ್ನು ತಪಾಸಣೆ ನಡೆಸಿದಾಗ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ 11 ಜಾನುವಾರುಗಳನ್ನು ಅತ್ಯಂತ ಹಿಂಸಾತ್ಮಕವಾಗಿ ತುಂಬಿರುವುದು ಕಂಡುಬಂದಿದೆ. ಈ ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದಲೇ ಕೇರಳದ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿದೆ. ಈ ಜಾನುವಾರುಗಳನ್ನು ಅಗತ್ಯ ಪರವಾನಗಿ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಿದ್ದ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 125/2026, ಕಲಂ: 4, 6, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಯುವ ಕಾಯ್ದೆ (Prevention of Cruelty to Animals Act) ಸೆಕ್ಷನ್ 11(d) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share This Article
Leave a Comment