ಮಂಗಳೂರು : ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಹಿಂದೆ ಇದ್ದ ಮೌಲ್ಯಗಳು ಮತ್ತು ಪಾವಿತ್ರ್ಯತೆ ಕುಸಿಯುತ್ತಿರುವುದು ಕಳವಳಕಾರಿ ಬೆಳವಣಿಗೆ. ಇಂತಹ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ತನ್ನ ನೈತಿಕ ಜವಾಬ್ದಾರಿಯನ್ನು ಮರೆಯಬಾರದು. ಮಾಧ್ಯಮದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಕರ್ತವ್ಯ ಎಂದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಹೇಳಿದರು.


ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ನ ನವೀಕೃತ ‘ಅಕ್ಷರ ಸಭಾಂಗಣ’ ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲನೆಗೊಳಿಸಿ ಅವರು ಮಾತನಾಡಿದರು.
ಪತ್ರಿಕಾ ಮಾಧ್ಯಮ ಸಮಾಜದ ತಪ್ಪುಗಳನ್ನು ಎತ್ತಿತೋರಿಸುವುದರ ಜತೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯನ್ನು ತಿದ್ದುವ ಮಹತ್ವದ ಜವಾಬ್ದಾರಿ ಹೊಂದಿದೆ. ಪತ್ರಿಕಾ ಧರ್ಮದ ಪಾಲನೆಯಿಂದ ಮಾತ್ರ ಸಮಾಜದ ಸುಧಾರಣೆ ಸಾಧ್ಯ ಎಂದು ಅವರು ಹೇಳಿದರು.
ಅಕ್ಷರ ಸಭಾಂಗಣ ಉದ್ಘಾಟಿಸಿದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ “ಮಂಗಳೂರು ನಗರದ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಮಹತ್ವದ್ದಾಗಿದೆ. ರಸ್ತೆಗಳ ದುಸ್ಥಿತಿ, ಸಾರ್ವಜನಿಕ ಸಮಸ್ಯೆಗಳನ್ನು ತೆರೆದಿಡುವ ಜನಪರ ವರದಿಗಾರಿಕೆಯಿಂದ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತಿದೆ. ನಾಡಿನ ಅಭಿವೃದ್ಧಿಯಲ್ಲಿ ಪತ್ರಕರ್ತರು ಸಕ್ರಿಯ ಪಾತ್ರವಹಿಸಬೇಕು ಎಂದರು.

ಮಂಗಳೂರು ಪ್ರೆಸ್ಕ್ಲಬ್ನ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ನಾಮಫಲಕ ಅನಾವರಣಗೊಳಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಬಿ.ರವೀಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.
ಪ್ರೆಸ್ಕ್ಲಬ್ನ ಉಪಾಧ್ಯಕ್ಷ ಮುಹಮ್ಮದ್ ಅರಿಫ್ ಪಡುಬಿದ್ರಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ
ವಂದಿಸಿದರು. ಸತೀಶ್ ಇರಾ ಪ್ರಾರ್ಥಿಸಿದರು. ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು.

