ಕುಂದಾಪುರ: ಮುಳ್ಳಿಕಟ್ಟೆ ಅರಾಟೆ ಸೇತುವೆ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 28 ಜನರಿಗೆ ಗಾಯ..!

Prakhara News
1 Min Read

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆ ಬಳಿ ರವಿವಾರ ಬೆಳಿಗ್ಗೆ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 28 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ತೀವ್ರ ಗಂಭೀರವಾಗಿದೆ.

ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ‘ಶ್ರೀ ದುರ್ಗಾಂಬ’ ಬಸ್‌ಗೆ ಮಂತ್ರಾಲಯದಿಂದ ಮಂಗಳೂರಿನತ್ತ ಸಾಗಿ ಬಂದ ‘ಗಣೇಶ್’ ಖಾಸಗಿ ಬಸ್ ಎದುರಿನಿಂದ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಶ್ರೀ ದುರ್ಗಾಂಬ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಷ್ಟೇ ಅಲ್ಲದೆ, ರಭಸಕ್ಕೆ ಬಸ್ಸು ರಸ್ತೆಯಲ್ಲೇ ತಿರುಗಿ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ವಾಹನಕ್ಕೆ ಜೋರಾಗಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಎರಡೂ ಬಸ್ಸುಗಳಲ್ಲಿದ್ದ ಪ್ರಯಾಣಿಕರು ಹಾಗೂ ಗೂಡ್ಸ್ ವಾಹನದ ಚಾಲಕನಿಗೂ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡ ಮೂವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಗಾಯಾಳುಗಳನ್ನು ಕುಂದಾಪುರದ ವಿವಿಧ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಸೇರಿಸಲಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆದ್ದಾರಿ ಸಂಚಾರ ಸುಗಮಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment