ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ
ವ್ಯಾಪ್ತಿಯ 37ನೇ ಮರೋಳಿ ವಾರ್ಡಿನಲ್ಲಿ ಮಹಾತ್ಮ ಗಾಂಧಿ ವಿಕಾಸ ಯೋಜನೆಯ 2ನೇ ಹಂತದಡಿ ₹6 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಗಳು, ಹದಗೆಟ್ಟ ಪ್ರಮುಖ ರಸ್ತೆಗಳು ಹಾಗೂ ದೇವಸ್ಥಾನ ಮತ್ತು ಚರ್ಚ್‌ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ ಈ ಅನುದಾನವನ್ನು ಬಳಸಲಾಗುತ್ತಿದೆ.


ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸೇರಿದಂತೆ ನಗರದ ರಸ್ತೆ ಅಭಿವೃದ್ಧಿಗಾಗಿ ಸುಮಾರು ₹400 ಕೋಟಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಕಾಮಗಾರಿಗಳು ಹಂತ ಹಂತವಾಗಿ ಪ್ರಾರಂಭವಾಗಲಿವೆ. ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗಳು ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗುಣಮಟ್ಟಕ್ಕೆ ಆದ್ಯತೆ ನೀಡಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಅವರು ಸೂಚನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮಾಜಿ ಕಾರ್ಪೊರೇಟರ್‌ಗಳು, ಧರ್ಮಗುರು ರೆವರೆಂಡ್ ಫಾದರ್ ಪ್ರಕಾಶ್ ಡಿ’ಕುನ್ಹಾ ಸೇರಿದಂತೆ ವಾರ್ಡಿನ ಪ್ರಮುಖರು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು.





