ಮಂಗಳೂರು: ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಕಾರೊಂದು ಲಾರಿಯ ಹಿಂಭಾಗಕ್ಕೆ ರಭಸವಾಗಿ ಢಿಕ್ಕಿ ಹೊಡೆದಿದ್ದು, ಕಾರು ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ನಂತೂರು ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ.


ಅಪಘಾತದಲ್ಲಿ ಕಾರು ಚಾಲಕ ನಿಝಾಮ್ ಹಾಗೂ ಸಹ ಪ್ರಯಾಣಿಕ ಮುಫಿಝ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಗುರುವಾರ ರಾತ್ರಿ 9.50ರ ಸುಮಾರಿಗೆ ಪಂಪ್‌ವೆಲ್ ಕಡೆಯಿಂದ ನಂತೂರು ಮಾರ್ಗವಾಗಿ ತಮಿಳುನಾಡು ನೋಂದಣಿಯ ಲಾರಿಯೊಂದು ಬರುತ್ತಿತ್ತು. ನಂತೂರು ಜಂಕ್ಷನ್ ಸಮೀಪಿಸುತ್ತಿದ್ದಂತೆ ಲಾರಿ ಚಾಲಕ ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಹಿಂಭಾಗದ ಬಲಭಾಗಕ್ಕೂ ಸ್ವಲ್ಪ ಹಾನಿಯಾಗಿದೆ.

ಅಪಘಾತದಿಂದಾಗಿ ನಂತೂರು ಜಂಕ್ಷನ್‌ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಭೇಟಿ ನೀಡಿದ ಸಂಚಾರ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



