ಮಂಗಳೂರು ವಿಮಾನ ನಿಲ್ದಾಣ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ; 236 ಮಂದಿ ಪ್ರಾಣಾಪಾಯದಿಂದ ಪಾರು..!

Prakhara News
1 Min Read

ಮಂಗಳೂರು: ವಿಮಾನ ಟೇಕ್ ಆಫ್ ಆಗುವ ಕೊನೆಯ ಕ್ಷಣದಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ನ.16) ಸಂಜೆ ನಡೆದಿದೆ. ವಿಮಾನದಲ್ಲಿದ್ದ ಒಟ್ಟು 236 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ (IndiGo) ವಿಮಾನದಲ್ಲಿ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಜನ ಪ್ರಯಾಣಿಸುತ್ತಿದ್ದರು.

ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಇಂಡಿಗೋ ವಿಮಾನವು ರನ್‌ವೇಯಲ್ಲಿ ಟೇಕ್ ಆಫ್ ಆಗಲು ಸಿದ್ಧತೆ ನಡೆಸಿ ವೇಗವಾಗಿ ಸಾಗುತ್ತಿತ್ತು. ಈ ವೇಳೆ ವಿಮಾನದ ಇಂಜಿನಿನಲ್ಲಿ ತಾಂತ್ರಿಕ ದೋಷವಿರುವುದು ಪೈಲಟ್‌ ಅವರ ಗಮನಕ್ಕೆ ಬಂದಿದೆ. ಕೂಡಲೇ ಎಚ್ಚೆತ್ತ ಪೈಲಟ್, ಯಾವುದೇ ಅನಾಹುತಕ್ಕೆ ಅವಕಾಶ ನೀಡದಂತೆ ಟೇಕ್ ಆಫ್ ಆಗುವ ಕೊನೆಯ ಕ್ಷಣದಲ್ಲಿ ವಿಮಾನಕ್ಕೆ ತಕ್ಷಣವೇ ಬ್ರೇಕ್ ಹಾಕಿ ಸುರಕ್ಷಿತವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ದೊಡ್ಡ ಪ್ರಮಾಣದ ದುರಂತವೊಂದು ತಪ್ಪಿದಂತಾಗಿದೆ.

ಬಳಿಕ ವಿಮಾನವನ್ನು ಸುರಕ್ಷಿತ ಸ್ಥಳಕ್ಕೆ ತಂದು, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಇಂಡಿಗೋ ವಿಮಾನಯಾನ ಸಂಸ್ಥೆಯು ತಕ್ಷಣವೇ ಪರ್ಯಾಯ ವಿಮಾನದ ವ್ಯವಸ್ಥೆಯನ್ನು ಕಲ್ಪಿಸಿದೆ.

Share This Article
Leave a Comment