ಮಂಗಳೂರು : ಮಂಗಳೂರಿನಲ್ಲಿ ನ.30ರಂದು ಬೃಹತ್ ಉದ್ಯೋಗ ಮೇಳ, 200 ಕ್ಕೂ ಹೆಚ್ಚು ಕಂಪೆನಿಗಳು ಭಾಗಿ ; 10 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ…!

Prakhara News
2 Min Read
Oplus_131072

ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕರಾವಳಿ ಭಾಗದ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಬೃಹತ್ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಹಾಗೂ 10,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳ ಜೊತೆಗೆ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಭ್ಯರ್ಥಿಗಳೂ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಿಕೊಂಡಿರುವ 10,089 ಅಭ್ಯರ್ಥಿಗಳು, ಯುವನಿಧಿ ಯೋಜನೆಯಡಿ ನೋಂದಾಯಿಸಿರುವ 8,708 ಫಲಾನುಭವಿಗಳು ಹಾಗೂ ಯುವ ಉದ್ಯೋಗ ಸೇತು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಉತ್ತಮ ವೇದಿಕೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿವರ್ಷ ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಕೈಗಾರಿಕಾ ತರಬೇತಿ ಸಂಸ್ಥೆಗಳು, ಪದವಿ ಹಾಗೂ ಪದವಿಪೂರ್ವ ಕಾಲೇಜುಗಳು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಂದ ಸುಮಾರು 65 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಹೊರಬರುತ್ತಿದ್ದಾರೆ. ಇಂತಹ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಮೇಳ ಮಹತ್ವ ಪಡೆದಿದೆ.

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ (ಕಾಂತ) ನಾಯಕ ಸೇರಿದಂತೆ ಸ್ಥಳೀಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಊಟೋಪಚಾರದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ರವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

Share This Article
Leave a Comment