ಬೆಂಗಳೂರು: ಭೂಗತ ಪಾತಕಿ ಕಲಿ ಯೋಗೀಶ್ನ ಪ್ರಮುಖ ಸಹಚರ ರಾಜೇಶ್ ಕೇಶವ ಆಚಾರ್ಯನನ್ನು ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ (UAE) ಭಾರತಕ್ಕೆ ಗಡಿಪಾರು ಮಾಡಲಾಗಿದೆ. ಸಿಬಿಐ (CBI), ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಹಾಗೂ ಕರ್ನಾಟಕ ಪೊಲೀಸರ ಜಂಟಿ ಸಮನ್ವಯದೊಂದಿಗೆ ಈ ಕಾರ್ಯಾಚರಣೆ ಯಶಸ್ವಿಯಾಗಿದೆ.


2002ರಲ್ಲಿ ನಡೆದಿದ್ದ ಮನೋಹರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಹತ್ಯೆಗೆ ಪ್ರಚೋದನೆ ನೀಡಿದ ಗಂಭೀರ ಆರೋಪವನ್ನು ರಾಜೇಶ್ ಕೇಶವ ಆಚಾರ್ಯ ಎದುರಿಸುತ್ತಿದ್ದನು. ಪ್ರಕರಣದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ ಆತ, ಯುಎಇಯಲ್ಲಿ ತಲೆಮರೆಸಿಕೊಂಡಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಚಾರ್ಯ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಲು 2026ರ ಮೇ ತಿಂಗಳಲ್ಲಿ ಆತನ ವಿರುದ್ಧ ಇಂಟರ್ಪೋಲ್ (Interpol) ಮೂಲಕ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿತ್ತು. ಅಲ್ಲದೆ, ಮೂರು ತಿಂಗಳ ಹಿಂದೆಯೇ ಆತನ ಪಾಸ್ಪೋರ್ಟ್ ಅನ್ನೂ ರದ್ದುಪಡಿಸಲಾಗಿತ್ತು. ಯುಎಇಯಲ್ಲಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಅಲ್ಲಿನ ಅಧಿಕಾರಿಗಳು ಆತನನ್ನು ಭಾರತಕ್ಕೆ ಹಸ್ತಾಂತರಿಸಿದ್ದಾರೆ. ಶುಕ್ರವಾರ (ನವೆಂಬರ್ 27) ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಜೇಶ್ ಕೇಶವ ಆಚಾರ್ಯನನ್ನು ಕರ್ನಾಟಕ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸಿಬಿಐ ಪ್ರಕಟಣೆಯಲ್ಲಿ ತಿಳಿಸಿದೆ.



