ಹಾವೇರಿ: ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಿಂದ ಮೂವರು ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.


ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ(27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ.

ಸೌಂದರ್ಯ(26), ಸಿಂಧೂ(24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಗೇಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


