ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ.


ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಯಲಹಂಕ ಮೂಲದ ಜಗದೀಶ್ ಹಾಗೂ ವೈಷ್ಣವ್ ಎಂದು ಗುರುತಿಸಲಾಗಿದ್ದು, ಉಳಿದವರ ಮಾಹಿತಿ ಲಭ್ಯವಾಗಬೇಕಿದೆ.

ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಕಾರಿನಲ್ಲಿ ಐವರು ಯುವಕರು ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಠಾಣೆಯ ಪೊಲೀಸರು ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



