ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಪಲ್ಟಿಯಾದ ಪರಿಣಾಮ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ನಡೆದಿದೆ.


ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಟಿಟಿ ವಾಹನವು ಅಪಾಯಕಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಆತಂಕಕಾರಿ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಸಂಭವಿಸಿದ ಈ ದುರ್ಘಟನೆ ವೇಳೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ಸಂಬಂಧ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.



