ಕರ್ನೂಲ್ : ಸುಳ್ಯ ಮೂಲದ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಯುವತಿ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಕ್ಷಿಪ್ರಾ ಭಟ್ (27 ವರ್ಷ) ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಬಿಟ್ಟಿದ್ದಾರೆ. ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಏಕೈಕ ಪುತ್ರಿ ಕ್ಷಿಪ್ರಾ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರು. ಶನಿವಾರ ರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಚಾಲಕನಿಗೆ ಮಂಪರು ಆವರಿಸಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕ್ಷಿಪ್ರಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಸಹೋದ್ಯೋಗಿಗಳು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆಯನ್ನು ಮೊದಲೇ ಕಳೆದುಕೊಂಡಿದ್ದ ಕ್ಷಿಪ್ರಾ ತಾಯಿ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮನೆಯ ಏಕೈಕ ಆಧಾರವಾಗಿದ್ದ ಮಗಳ ನಿಧನದಿಂದ ಸುಳ್ಯದ ಕಂದಡ್ಕ ಪರಿಸರದಲ್ಲಿ ಶೋಕ ಮಡುಗಟ್ಟಿದೆ.




