ಬಂಟ್ವಾಳ: ಮಿನಿ ಬಸ್ ಪಲ್ಟಿ – ಓರ್ವ ಸಾವು

Prakhara News
1 Min Read

ಬಂಟ್ವಾಳ: ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್‌ ಬರುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಮಂಗಳೂರು ಮೂಲದ ವಿಕಾಸ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಇತರ ಎಂಟು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿಗಳ ಪ್ರಕಾರ, ಮಂಗಳೂರಿನಿಂದ ಒಂದು ಗುಂಪು ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿಗೆ ತೆರಳಿತ್ತು.

ಕಾರ್ಯಕ್ರಮ ಮುಗಿಸಿ ವಾಪಸ್ ಮಂಗಳೂರಿಗೆ ಬರುತ್ತಿದ್ದಾಗ, ಬಂಟ್ವಾಳದ ಪುದು ಗ್ರಾಮದ 10ನೇ ಮೈಲು ಕಲ್ಲು ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್‌, ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಸುಮಾರು ಒಂಬತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಅವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಕಾಸ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment