ಕಂಬಳಕ್ಕೆ ಸರಕಾರದಿಂದ ನೆರವು, ಮುಂದಿನ ಬಾರಿ ಕೂಡ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ: ಸಿಎಂ ಸಿದ್ದರಾಮಯ್ಯ ಘೋಷಣೆ

Prakhara News
3 Min Read

ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನೂ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುದಲ್ಲಿ ಶನಿವಾರ ಆರಂಭಗೊಂಡ 15ನೇ ವರ್ಷದ ಮೂಡೂರು–ಪಡೂರು ಜೋಡುಕರೆ ಬಯಲು ಕಂಬಳಕೂಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕೀಯ ಪ್ರಜಾಪ್ರಭುತ್ವದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ದೊರಕಿದಾಗ ಮಾತ್ರ ಸ್ವಾತಂತ್ರ್ಯದ ಪರಿಕಲ್ಪನೆ ಯಶಸ್ವಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜದ ದುರ್ಬಲ ವರ್ಗವನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ಮುಂದೆಯೂ ಇದೇ ರೀತಿಯ ಕಾರ್ಯಗಳನ್ನು ಮುಂದುವರಿಸಲಾಗುವುದು. ರಾಜ್ಯದ ಜನರು ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದ್ದು, 2028ರಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಮಾಜಿ ಸಚಿವ ಬಿ. ರಮಾನಾಥ ರೈ ಅವರ ಕ್ಷೇತ್ರಕ್ಕೆ ಕಳೆದ ಅವಧಿಯಲ್ಲಿ ಸುಮಾರು 5 ಸಾವಿರ ಕೋಟಿ ರೂಪಾಯಿ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆದರೂ ಅವರನ್ನು ಜನರು ಸೋಲಿಸಿದ್ದು ನೋವಿನ ಸಂಗತಿಯಾಗಿದೆ. 2028ರಲ್ಲಿ ಅವರು ಮತ್ತೆ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಸಿಎಂ ಘೋಷಿಸಿದರು. ಮುಂದಿನ ಆರ್ಥಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಾಗಿ ಕೂಡ ಅವರು ಭರವಸೆ ನೀಡಿದರು.

“ಸಿಎಂಗೆ ಕಂಬಳದ ಬೆತ್ತ ಸನ್ಮಾನ”

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳದ ಬೆತ್ತ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ. ಸಂತೋಷ್ ಗುರೂಜಿ ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಸ್ತಾವಿಕವಾಗಿ ಮಾತನಾಡಿ, 2013–18ರ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಹೇಳಿದರು. ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿಯ ಮೂರು ಜಿಲ್ಲೆಗಳಿಗೆ 300 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣ ಕಾರ್ಯಕ್ಕೆ ಮತ್ತೆ ಜೀವ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಸಲೀಮ್ ಅಹ್ಮದ್ ಹಾಗೂ ಐವಾನ್ ಡಿಸೋಜ, ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ಟಿ.ಡಿ. ರಾಜೇಗೌಡ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಾಮಾಜಿಕ ಕಾರ್ಯಕರ್ತ ಎಂ.ಜಿ. ಹೆಗಡೆ, ವಿವಿಧ ನಿಗಮಗಳ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಟಿ.ಎಂ. ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ, ಶಾಲೆಟ್ ಪಿಂಟೋ,

ಸದಾಶಿವ ಉಳ್ಳಾಲ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಧನಭಾಗ್ಯ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್. ಪೂಜಾರಿ ಹಾಗೂ ಕೃಪಾ ಆಳ್ವ , ಧರ್ಮಗುರು ವಿಕ್ಟರ್ ಡಿಸೋಜ, ವಿಲ್ಫ್ರೆಡ್ ರೋಡ್ರಿಗಸ್ (ಮೈಸೂರು), ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಚೆನ್ನವೇಣಿ ಶೆಟ್ಟಿ, ನ್ಯಾಯವಾದಿ ಅಶ್ವನಿಕುಮಾರ್ ರೈ, ದೀಪಕ್ ಕುಮಾರ್ ರೈ, ಉದ್ಯಮಿ ಉದಯ ಹೆಗ್ಡೆ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೋಡಾಜೆ ಹಾಗೂ ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು. ಸಿಎಂ ಆಗಮನದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

Share This Article
Leave a Comment