ಭಟ್ಕಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ ಆರೋಪ : ಇಬ್ಬರು ವಶಕ್ಕೆ ; ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ..!

Prakhara News
1 Min Read

ಉತ್ತರ ಕನ್ನಡ : ಭಟ್ಕಳದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಟ್ಕಳ ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಗಣೇಶ ಮೂರ್ತಿಯತ್ತ ಕಲ್ಲು ತೂರಾಟ ನಡೆಸಿದವರನ್ನೂ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮೊದಲು ಗಣೇಶ ಮೂರ್ತಿಯತ್ತ ಕಲ್ಲು ತೂರಾಟ ನಡೆದಿದ್ದು, ಬಳಿಕ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಪ್ರಾಪ್ತರು ಎಂಬ ಕಾರಣಕ್ಕೆ ಸಲುಗೆ ನೀಡುತ್ತಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ವಾಗ್ವಾದವೂ ನಡೆಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ದಾಖಲಾಗಿರುವ ದೂರುಗಳ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದರು.
ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Share This Article
Leave a Comment