ಭಾರೀ ಮಳೆ ರೆಡ್ ಅಲರ್ಟ್ ಹಿನ್ನಲೆ ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ..!

Prakhara News
1 Min Read

ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಗುರುವಾರ ಜುಲೈ 2 ದ.ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಮುಂಗಾರು ಮಳೆ ಮೊದಲ ರಜೆ ಮಕ್ಕಳಿಗೆ ಸಿಕ್ಕಿದೆ.

ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರಿ ಮಳೆಯ ಮುನ್ಸೂಚನೆ (ರೆಡ್ – ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 02.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಹೊಳೆ, ಕೆರೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳು ಹಾಗೂ ಜಲಮೂಲಗಳ ಬಳಿ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ಇಲಾಖೆಗಳಿಗೂ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Leave a Comment