ಕಡಬ: ಅಪ್ರಾಪ್ತ ಬಾಲಕಿಯ ಮನೆಗೆ ಅಕ್ರಮವಾಗಿ ಅತಿಕ್ರಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯವೆಸಗಿ ಜೀವ ಬೆದರಿಕೆಯೊಡ್ಡಿದ್ದ ಕಡಬ ಠಾಣೆಯ ರೌಡಿಶೀಟರ್ಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಭಾರಿ ದಂಡ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸದ್ದಾಂ (34) ನ್ಯಾಯಾಲಯದಿಂದ ಕಠಿಣ ಶಿಕ್ಷೆಗೆ ಗುರಿಯಾದ ಅಪರಾಧಿ.


ಕಡಬ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮನೆಗೆ ಅತಿಕ್ರಮಣ ಮಾಡಿದ್ದ ಆರೋಪಿ ಸದ್ದಾಂ, ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ಕುರಿತು ದಾಖಲಾದ ದೂರಿನನ್ವಯ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಮಗ್ರ ತನಿಖೆ ನಡೆಸಿದ್ದ ಆಗಿನ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ನಾಗೇಶ್ ಕೆ. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ, ಆರೋಪಿ ಸದ್ದಾಂ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (Charge-sheet) ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯು ಮಂಗಳೂರಿನ ಮಾನ್ಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ (ಕಾರ್ಯನಿರ್ವಹಣೆ – ಪುತ್ತೂರು) ನಡೆಯಿತು. ಪ್ರಾಸಿಕ್ಯೂಷನ್ ಪರ ಸಾಕ್ಷ್ಯಗಳು ಹಾಗೂ ಸಬಲ ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು, ಆರೋಪಿತನ ವಿರುದ್ಧದ ಅಪರಾಧಗಳು ಸಾಬೀತಾಗಿರುವುದನ್ನು ಎತ್ತಿಹಿಡಿದು ಈ ಕೆಳಗಿನಂತೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ:
ಪೋಕ್ಸೋ ಕಾಯ್ದೆ ಅಡಿ: ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕು.
ಐಪಿಸಿ ಸೆಕ್ಷನ್ 506 (ಜೀವ ಬೆದರಿಕೆ) : 1 ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ ಮತ್ತೊಂದು ವರ್ಷ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಈ ಎರಡೂ ಶಿಕ್ಷೆಗಳು ಏಕಕಾಲದಲ್ಲಿ (Concurrently) ಜಾರಿಯಾಗಲಿವೆ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ.


ಶಿಕ್ಷೆಗೆ ಗುರಿಯಾದ ಅಪರಾಧಿ ಸದ್ದಾಂ ಕಡಬ ಪೊಲೀಸ್ ಠಾಣೆಯ ಗುರುತಿಸಲ್ಪಟ್ಟ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಈಗಾಗಲೇ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2011, 62/2020, 27/2021, 105/2021 ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 101/2022 ರಂತೆ ಸಾಲು ಸಾಲು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ (Public Prosecutor) ಪುಷ್ಪರಾಜ್ ಅಡಂತಾಯ ಅವರು ಸರ್ಕಾರದ ಪರವಾಗಿ ಅತ್ಯಂತ ಸಮರ್ಥವಾಗಿ ವಾದ ಮಂಡನೆ ನಡೆಸಿದ್ದರು.


