ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್ ; ₹2.07 ಲಕ್ಷ ಮೌಲ್ಯದ ಆಭರಣ ವಶ..!

Prakhara News
1 Min Read

ಕೊಲ್ಲೂರು : ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಲ್ಲೂರಿನ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವುಗೈದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹2.07 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ರಿಕವರಿ ಮಾಡಲಾಗಿದೆ.

ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ್ (40) ಬಂಧಿತ ಆರೋಪಿ. ಈತನಿಂದ 3.910 ಗ್ರಾಂ ತೂಕದ ಚಿನ್ನದ ಉಂಗುರ, 3.450 ಗ್ರಾಂ ತೂಕದ ಬಳೆ ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ ಸೇರಿದಂತೆ ಒಟ್ಟು ಸುಮಾರು ₹2.07 ಲಕ್ಷ ಮೌಲ್ಯದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೇ 17ರಂದು ಕೊಲ್ಲೂರು ದಳಿ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದರು. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಅಪಘಾತದ ಕೇಸ್ ದಾಖಲಾಗಿತ್ತು. ಆದರೆ, ಅಪಘಾತದ ಬಳಿಕ ಮೃತ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನದ ಆಭರಣಗಳು ನಾಪತ್ತೆಯಾಗಿದ್ದವು. ಶವದ ಮೇಲಿದ್ದ ಒಡವೆಗಳನ್ನು ಯಾರೋ ಕಳವು ಮಾಡಿದ್ದಾರೆ ಎಂದು ಶ್ರೀಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ಕಳವು ಕುರಿತು ಮತ್ತೊಂದು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಸಿಪಿಐ ಶಿವಕುಮಾರ್ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಅಪಘಾತ ನಡೆದ ತಕ್ಷಣ ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರು ತೆಗೆದಿದ್ದ ಫೋಟೋಗಳು, ಮೊಬೈಲ್ ವಿಡಿಯೋಗಳು, ಆ ಭಾಗದ ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಯನ್ನು (Technical Intelligence) ಜಾಲಾಡಿದ ಪೊಲೀಸರು, ಕಲ್ಯಾಣಿಗುಡ್ಡೆಯ ಹೇಮಂತ್ ಈ ಕೃತ್ಯ ಎಸಗಿರುವುದನ್ನು ಪತ್ತೆಹಚ್ಚಿ ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Share This Article
Leave a Comment