ಹೃದಯಾಘಾತ ಸಾವು ತಡೆಗೆ ಸರ್ಕಾರದ ಮಹತ್ವದ ಕ್ರಮ-ರಾಜ್ಯದ 31 ಜಿಲ್ಲೆಗಳಿಗೂ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ಆರೋಗ್ಯ ಸಚಿವ ಯು. ಟಿ ಖಾದರ್

Prakhara News
2 Min Read

ಮಂಗಳೂರು : ಹೃದಯಾಘಾತದಿಂದ ಸಂಭವಿಸುವ ಸಾವುಗಳನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ಡಾ.ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೃದಯಾಘಾತದ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಗೋಲ್ಡನ್ ಅವರ್‌ನಲ್ಲೇ ಚಿಕಿತ್ಸೆ ದೊರೆಯುವಂತೆ ಮಾಡುವ ಉದ್ದೇಶದಿಂದ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ತಾಲೂಕು ಆಸ್ಪತ್ರೆಗಳಲ್ಲೇ ಇಸಿಜಿ ಪರೀಕ್ಷೆ:
ಎದೆನೋವು ಕಾಣಿಸಿಕೊಂಡರೆ ತಾಲೂಕು ಆಸ್ಪತ್ರೆಗಳಲ್ಲಿಯೇ ತಕ್ಷಣ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಇಸಿಜಿ ಪರೀಕ್ಷೆಯಲ್ಲಿ ಹೃದಯಾಘಾತದ ಲಕ್ಷಣಗಳು ಕಂಡುಬಂದರೆ ರೋಗಿಗಳಿಗೆ ಉಚಿತವಾಗಿ ತುರ್ತು ಇಂಜೆಕ್ಷನ್ ನೀಡುವ ವ್ಯವಸ್ಥೆ ಮಾಡಲಾಗುತ್ತದೆ.

ತುರ್ತು ಚಿಕಿತ್ಸೆ ಬಳಿಕ ಅಗತ್ಯವಿದ್ದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಆಂಜಿಯೋಗ್ರಫಿ ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಈಗಾಗಲೇ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಯೋಜನೆ ಜಾರಿಯಲ್ಲಿದ್ದು, ಆರೋಗ್ಯ ಇಲಾಖೆಯ ಅಂಕಿ-ಅಂಶಗಳನ್ನು ಆಧರಿಸಿ ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರಿ ಡಯಾಲಿಸಿಸ್ ಕೇಂದ್ರಗಳಲ್ಲಿ ಡಯಲೈಜರ್ ಮರುಬಳಕೆಗೆ ಅವಕಾಶವಿಲ್ಲ:
ಒಮ್ಮೆ ಬಳಕೆ ಮಾಡಿದ ಡಯಲೈಜರ್ ಮತ್ತೆ ಬಳಸುವಂತಿಲ್ಲ; ರೋಗಿಗಳ ಸುರಕ್ಷತೆಗೆ ಆರೋಗ್ಯ ಸಚಿವರ ಕಟ್ಟುನಿಟ್ಟಿನ ಸೂಚನೆ

ಮಂಗಳೂರು: ರಾಜ್ಯದ ಸರ್ಕಾರಿ ಡಯಾಲಿಸಿಸ್ ಕೇಂದ್ರಗಳಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಬಳಸುವ ಡಯಲೈಜರ್‌ಗಳನ್ನು ಮರುಬಳಕೆ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟ ಸೂಚನೆ ನೀಡಿದ್ದಾರೆ.

ಡಯಾಲಿಸಿಸ್ ಚಿಕಿತ್ಸೆಯಲ್ಲಿ ಬಳಸುವ ಡಯಲೈಜರ್ ಅನ್ನು ಕೇವಲ ಒಂದು ಬಾರಿ ಮಾತ್ರ ಬಳಸಬೇಕು. ಒಮ್ಮೆ ಬಳಕೆ ಮಾಡಿದ ಡಯಲೈಜರ್‌ಗಳನ್ನು ಮತ್ತೆ ಮರುಬಳಕೆ ಮಾಡುವಂತಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ 169 ಸರ್ಕಾರಿ ಡಯಾಲಿಸಿಸ್ ಕೇಂದ್ರಗಳು:
ರಾಜ್ಯಾದ್ಯಂತ ಒಟ್ಟು 169 ಸರ್ಕಾರಿ ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈ ಕೇಂದ್ರಗಳಲ್ಲಿ ಒಟ್ಟು 639 ಡಯಾಲಿಸಿಸ್ ಯಂತ್ರಗಳು ಲಭ್ಯವಿವೆ. ಪ್ರತಿವರ್ಷ ರಾಜ್ಯಾದ್ಯಂತ ಸುಮಾರು 5 ಲಕ್ಷ ಡಯಾಲಿಸಿಸ್ ಸೆಷನ್‌ಗಳು ನಡೆಯುತ್ತಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ರೋಗಿಗಳ ಸುರಕ್ಷತೆ ಹಾಗೂ ಚಿಕಿತ್ಸೆಯ ಗುಣಮಟ್ಟವನ್ನು ಕಾಪಾಡುವ ನಿಟ್ಟಿನಲ್ಲಿ ಡಯಲೈಜರ್ ಮರುಬಳಕೆಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದರು.

Share This Article
Leave a Comment