ಮಂಗಳೂರು: ತುಳುನಾಡಿನ ಬಹುದಿನಗಳ ಬೇಡಿಕೆಯಂತೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಖಾತೆ ಸಚಿವ ಯು.ಟಿ.ಖಾದರ್ ಹೇಳಿದರು.


ಮಂಗಳೂರಿನ ಪ್ರಜಾ ಸೌಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಸಮಸ್ಯೆಗಳಿಗೆ ಬೆಂಗಳೂರಿನಿಂದಲೇ ಪರಿಹಾರ ಕಂಡುಕೊಳ್ಳುವ ಬದಲು ಸಚಿವ ಸಂಪುಟವೇ ಮಂಗಳೂರಿನಲ್ಲಿ ಸಭೆ ನಡೆಸುವುದರಿಂದ ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಸಾಧ್ಯವಾಗಲಿದೆ. ಕಾನೂನಿನ ವ್ಯಾಪ್ತಿಯಲ್ಲಿ ಜಿಲ್ಲೆಗೆ ಅಗತ್ಯವಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಜನರ ಬೇಡಿಕೆಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾದರೆ ಮಂಗಳೂರಿನಲ್ಲೇ ನಡೆಸಬೇಕು ಎಂದು ತಾನು ಮುಖ್ಯಮಂತ್ರಿಯವರಲ್ಲಿ ಈ ಹಿಂದೆ ಮನವಿ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಮಾನವ ಸಂಪನ್ಮೂಲ, ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ, ಸಾರಿಗೆ, ಸಂಪರ್ಕ ವ್ಯವಸ್ಥೆ ಹಾಗೂ ಧಾರ್ಮಿಕ ಕ್ಷೇತ್ರಗಳ ಸಾಮರ್ಥ್ಯವನ್ನು ಪರಿಗಣಿಸಿ ಕರಾವಳಿಗೆ ಹೆಚ್ಚಿನ ಮಹತ್ವ ನೀಡುವ ಭರವಸೆ ನೀಡಿದ್ದರು. ಅದರಂತೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಖಾದರ್ ಹೇಳಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಮಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಪಂಪ್ವೆಲ್ನಿಂದ ಭವ್ಯ ಸ್ವಾಗತ ನೀಡಲು ತುಳುನಾಡಿನ ಜನತೆ ಮುಂದಾಗಬೇಕು. ಕರಾವಳಿಯ ಆತಿಥ್ಯ, ಪ್ರೀತಿ ಮತ್ತು ವಿಶ್ವಾಸವನ್ನು ಇಡೀ ರಾಜ್ಯಕ್ಕೆ ಪರಿಚಯಿಸುವ ಅವಕಾಶ ಇದಾಗಿದೆ. ಎಲ್ಲ ಸಂಘ-ಸಂಸ್ಥೆಗಳು, ಜಾತಿ, ವರ್ಗ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಭೇದ ಮರೆತು ಸ್ವಾಗತ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಪಸ್ಥಿತರಿದ್ದರು.

