ಮಂಗಳೂರು: ಹಾಡಹಗಲೇ ಮಂಗಳೂರಿನ ಕಾಲೇಜು ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಹಲವು ವ್ಯಕ್ತಿಗಳು ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದಿರುವುದು ಆಘಾತಕಾರಿ ಮಾತ್ರವಲ್ಲ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಕುರಿತು ಪ್ರಶ್ನೆ ಹುಟ್ಟು ಹಾಕಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಕಳವಳ ವ್ಯಕ್ತಪಡಿಸಿದರು.


ಅಪಹರಣದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಗಳು ಸಾರ್ವಜನಿಕವಾಗಿ ಯುವತಿಯ ಮೇಲೆ ಮೃಗೀಯ ವರ್ತನೆ ತೋರಿ ಕಾನೂನಿನ ಭಯವೇ ಇಲ್ಲದಂತೆ ವರ್ತಿಸಿದ್ದಾರೆ. ಪೋಷಕರೇ ಆಗಿರಲಿ, ಯಾರೇ ಆಗಿರಲಿ, ವಯಸ್ಕ ಹೆಣ್ಣುಮಕ್ಕಳ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುವುದನ್ನು ಸುಪ್ರೀಂ ಕೋರ್ಟ್ ಸಹ ಒಪ್ಪುವುದಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಣ್ಣುಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದ್ದು, ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ಮಹಿಳಾ ಆಯೋಗ ಯುವತಿಯ ನೆರವಿಗೆ ಧಾವಿಸಬೇಕು ಹಾಗೂ ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ಪ್ರಕರಣ ದಾಖಲಿಸಿಕೊಂಡು ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಬೇಕು ಮತ್ತು ಯುವತಿಯ ಸುರಕ್ಷತೆಯನ್ನು ಖಚಿತ ಪಡಿಸಿಕೊಳ್ಳಬೇಕು ಎಂದು ಶಾಸಕರು ಆಗ್ರಹಿಸಿದರು.




