ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA)ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಹಾಗೂ ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಜೂನ್ 8ರಂದು ಗೂಡ್ ಶೆಡ್ಡೆ ಪ್ರದೇಶದಲ್ಲಿ ಆರೋಪಿಗಳು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಗಳಿಂದ ಸುಮಾರು 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 122/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 22(ಸಿ) ಅನ್ವಯ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಇದೇ ವೇಳೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 116/2026 ಎನ್‌ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸುಶಾನ್ ಪೂಜಾರಿ (27) ಎಂಬ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರ ತಂಡವು ಸುಶಾನ್ ಪೂಜಾರಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಮಂಗಳೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಪ್ರಕರಣಗಳ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


